
ಗದಗದಲ್ಲಿ ಅಂದಾನಪ್ಪ ದೊಡ್ಡ ಮೇಟಿ ಸ್ಮಾರಕ ನಿರ್ಮಿಣ: ಸಿಎಂ ಸಿದ್ದರಾಮಯ್ಯ
ಗದಗ:ಸತ್ಯಮಿಥ್ಯ(ಸ -20)
ಧಾರವಾಡದಲ್ಲಿ ಅದರಗುಂಚಿ ಶಂಕರಗೌಡ ಸ್ಮಾರಕ ಹಾಗೂ ಗದಗದಲ್ಲಿ ಅಂದಾನಪ್ಪ ದೊಡ್ಡ ಮೇಟಿ ಸ್ಮಾರಕ ನಿರ್ಮಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ನಡೆದ ಕರ್ನಾಟಕ ಸುವರ್ಣ ಸಂಭ್ರಮ-50ರ ಸಮಾರೋಪ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಹೇಳಿದ್ದಾರೆ.
ರಾಜ್ಯೋತ್ಸವ ಪ್ರಶಸ್ತಿ – 2024ರ ಪ್ರದಾನ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ-50ರ ಸಮಾರೋಪ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು, ಮಾತನಾಡುತ್ತಿದ್ದರು.
ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರೋಪವನ್ನು ಕನ್ನಡ ಜನೋತ್ಸವವಾಗಿ ಆಚರಣೆ ಮಾಡಬೇಕು. ಕನ್ನಡ ಜನ ಚಳವಳಿ, ಕನ್ನಡತನದ ವಿಸ್ತಾರ, ಕನ್ನಡದ ಅರಿವು ವಿಸ್ತರಿಸಿದ ಮಾದರಿಗಳು, ಹೋರಾಟದ ಹಾದಿಯಲ್ಲಿ ರೂಪುಗೊಂಡ ಕನ್ನಡ ಚರಿತ್ರೆಯನ್ನು ಇವತ್ತಿನ ಕನ್ನಡ ಯುವಜನ ಸಮೂಹಕ್ಕೆ ತಲುಪಿಸಲು ಕ್ರಮ ವಹಿಸಬೇಕು.ಕನ್ನಡ ಭಾಷೆ – ಸಂಸ್ಕೃತಿ – ಸಂಗೀತ – ಸಾಹಿತ್ಯ – ಜನಪದ -ಚರಿತ್ರೆ ಎಲ್ಲದರ ಮಹತ್ವ ಸಾರುವಂತೆ ಕಾರ್ಯಕ್ರಮದ ಆಯೋಜನೆಯಾಗಲಿ.
* ರಾಜ್ಯೋತ್ಸವ ಪ್ರಶಸ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಸೆಪ್ಟಂಬರ್ 30ರ ವರೆಗೆ ಅರ್ಜಿ ಸಲ್ಲಿಸಬಹುದು. 69 ಮಂದಿಗೆ ಈ ಬಾರಿ ಪ್ರಶಸ್ತಿ ನೀಡಲಾಗುವುದು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಆಯ್ಕೆಗೆ ಸಮಿತಿ ರಚಿಸಲಾಗಿದೆ.
* ಎಲ್ಲಾ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ನಡೆಯುತ್ತಿದ್ದು, ಹಂಪಿಯಿಂದ ಆರಂಭವಾದ ಕನ್ನಡ ರಥ ಯಾತ್ರೆ ಈಗಾಗಲೇ 28 ಜಿಲ್ಲೆಗಳಲ್ಲಿ ಸಾಗಿದ್ದು, ರಥಯಾತ್ರೆಯ ಸಮಾರೋಪ ಸಮಾರಂಭ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆಯಲಿದೆ.ಕರ್ನಾಟಕ ಸುವರ್ಣ ಸoಭ್ರಮ -50 ಸಮಾರೋಪ ಸಮಾರoಭ ವಿಧಾನಸೌಧದ ಮುಂಭಾಗದಲ್ಲಿ ನಡೆಯಲಿದೆ. ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಹ ಇದೇ ಸಂದರ್ಭದಲ್ಲಿ ಮಾಡಲಾಗುವುದು.
* ಮೈಸೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಪ್ರತಿಮೆ ಸ್ಥಾಪನೆ ಕಾಮಗಾರಿ ಪ್ರಗತಿಯಲ್ಲಿದೆ. ಬಳ್ಳಾರಿಯಲ್ಲಿ ರಂಜಾನ್ ಸಾಬ್ ಸ್ಮಾರಕ ನಿರ್ಮಾಣ ಕಾರ್ಯ ನಡೆಯುತ್ತಿದೆ.
* ಧಾರವಾಡದಲ್ಲಿ ಅದರಗುಂಚಿ ಶಂಕರಗೌಡ ಸ್ಮಾರಕ ನಿರ್ಮಿಸಲು ಅಂದಾಜು ವೆಚ್ಚ ಸಲ್ಲಿಸಲಾಗಿದೆ. ಗದಗದಲ್ಲಿ ಅಂದಾನಪ್ಪ ದೊಡ್ಡ ಮೇಟಿ ಸ್ಮಾರಕ ನಿರ್ಮಿಸಲಾಗುತ್ತಿದೆ.
* 50 ಸಾಧಕ ಮಹಿಳೆಯರ ಕುರಿತು 100 ಪುಟಗಳ 50 ಕೃತಿಗಳನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ ಮೂಲಕ ಮುದ್ರಿಸಲಾಗುವುದು.
* ವಿಧಾನಸೌಧ ಆವರಣದಲ್ಲಿ 25 ಅಡಿ ಎತ್ತರದ ಭುವನೇಶ್ವರಿದೇವಿ ಕಂಚಿನ ಪ್ರತಿಮೆ ಕಾಮಗಾರಿ ಪ್ರಗತಿಯಲ್ಲಿದ್ದು, ನವೆಂಬರ್ 1ರಂದು ಅನಾವರಣಗೊಳ್ಳಲಿದೆ.
* ರಾಜ್ಯದ ನಾಲ್ಕು ವಲಯಗಳಲ್ಲಿ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು. ಮೈಸೂರಿನಲ್ಲಿ ಚಿಂತನಾ ಸಮಾವೇಶ, ರಾಯಚೂರಿಗೆ ಗೋಕಾಕ್ ಚಳವಳಿ ಸಂಸ್ಮರಣೆ, ಮಹಾರಾಷ್ಟ್ರದ ಜತ್ ತಾಲೂಕಿನಲ್ಲಿ ಗಡಿನಾಡು ಸಾಂಸ್ಕೃತಿಕ ಉತ್ಸವ ಮತ್ತು ಮಂಗಳೂರಿನಲ್ಲಿ ವಿವಿಧ ಅಕಾಡೆಮಿ ಸಹಯೋಗದಲ್ಲಿ ಬಹುಸಂಸ್ಕೃತಿ ಉತ್ಸವ ಆಯೋಜನೆ ಮಾಡಲಾಗುವುದು.
* ಕರ್ನಾಟಕ ಸುವರ್ಣ ಸಂಭ್ರಮ- 50ನೇ ವರ್ಷಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಮನೆ ಮನೆಯಲ್ಲಿ ಕನ್ನಡ ಬಾವುಟವನ್ನು ಹಾರಿಸಲು ಮನವಿ ಮಾಡಲಾಗುವುದು.
* ಕರ್ನಾಟಕದ ಬಹು ಸಂಸ್ಕೃತಿ, ಸೌಹಾರ್ದ ಸಂಸ್ಕೃತಿ, ಬಹುತ್ವದ ಕುರಿತು 100 ಪುಸ್ತಕಗಳನ್ನು ಸಿದ್ಧಪಡಿಸಲಾಗುತ್ತಿದ್ದು, ಡಿಸೆಂಬರ್ ವೇಳೆಗೆ ಬಿಡುಗಡೆ ಮಾಡಲಾಗುವುದು. ನಾಡಿನ ಕಲೆ, ಸಾಹಿತ್ಯ, ಕೃಷಿ, ತೋಟಗಾರಿಕೆ, ಕೈಗಾರಿಕೆ ಕುರಿತಾದ 5 ಸಂಪುಟಗಳನ್ನು ಸಿದ್ಧಪಡಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ಸ್ಮರಣ ಸಂಭ್ರಮ ಸಂಪುಟ ಹೊರತರಲಾಗುತ್ತಿದೆ.
* ಕನ್ನಡದ ಸಾಹಿತಿಗಳ ನುಡಿಮುತ್ತುಗಳನ್ನು ಎಲ್ಲಾ ಜಿಲ್ಲೆಗಳ ಪ್ರಮುಖ ಸ್ಥಳಗಳಲ್ಲಿ, ಕೆಎಸ್‌ಆರ್‌ಟಿಸಿ ಬಸ್ ಮತ್ತಿತರ ಕಡೆಗಳಲ್ಲಿ ಪ್ರಚುರಪಡಿಸಬೇಕು.
* ಎಲ್ಲಾ ಶಾಲಾ ಕಾಲೇಜುಗಳಲ್ಲಿ ಈ ಬಾರಿ ಕನ್ನಡ ರಾಜ್ಯೋತ್ಸವ ಸಂಭ್ರಮವನ್ನು ಅದ್ದೂರಿಯಾಗಿ ಆಚರಿಸಲು ಕ್ರಮಕೈಗೊಳ್ಳಬೇಕು.
ವರದಿ:ಮುತ್ತು ಗೋಸಲ್